ಆಟೋ - ಲಾರಿ ಡಿಕ್ಕಿ: ಐವರು ಅಡುಗೆ ಸಿಬ್ಬಂದಿ ದುರ್ಮರಣ - ಭೀಕರ ರಸ್ತೆ ಅಪಘಾತ
Published : Sep 3, 2023, 4:42 PM IST
ಬಾಪಟ್ಲಾ (ಆಂಧ್ರ ಪ್ರದೇಶ):ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಲ್ಲಿನ ಸಂತಾಮಗುಳೂರು ಸರ್ಕಾರಿ ಪ್ರೌಢಶಾಲೆ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಬೇಲಿಮೆಲ್ಲ ಕವಿತಾ, ಅಲಿವೇಲು ಮಂಗತ್ತಾಯರು, ಪಲ್ತಿ ನಾರಿ, ತಮ್ಮಿಶೆಟ್ಟಿ ತುಳಸಿ ಹಾಗೂ ಬುರ್ರಿ ಮಾಧವಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಟೋದಲ್ಲಿ ಪ್ರಯಾಣಿಸುತ್ತಿದ್ದರು ಹಾಗೂ ಗುಂಟೂರಿನ ಅಡುಗೆ ಸಿಬ್ಬಂದಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ನರಸರಾವ್‌ಪೇಟೆ ಕಡೆಯಿಂದ ವಿನುಕೊಂಡ ರಸ್ತೆ ಕಡೆಗೆ ಹೋಗುತ್ತಿದ್ದ ಲಾರಿ, ಮಾರ್ಕಾಪುರದಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದ ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣವೇ ಸ್ಥಳೀಯರು 108 ಆಂಬ್ಯುಲೆನ್ಸ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ನರಸರಾವ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇನ್ನಿಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಮತ್ತಿಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಕಾಸರಗೋಡು: ಕುಂಬ್ಳೆ ಸಮೀಪ ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲೇಟು