ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ವಾಸ್ತವ ಮನದಟ್ಟು ಮಾಡಿ: ಬಿಎಸ್ವೈ ಸಲಹೆ - ಬಿಎಸ್ವೈ ಸಲಹೆ
Published : Sep 19, 2023, 2:24 PM IST
ಬೆಂಗಳೂರು:15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಸಾಧ್ಯವಿಲ್ಲ. ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ರಾಜ್ಯದ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದರು.
ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯಾವುದೇ ಕಾರಣಕ್ಕೂ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ. ನಮ್ಮ ಜಲಾಶಯಗಳೆಲ್ಲಾ ಖಾಲಿಯಾಗಿವೆ. ಬೆಂಗಳೂರಿಗೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ಗೆ ಸರ್ಕಾರ ಮೇಲ್ಮನವಿ ಸಲ್ಲಿಸಲಿ. ರಾಜ್ಯದ ವಾಸ್ತವಿಕ ಪರಿಸ್ಥಿತಿ ಬಗ್ಗೆ ತಿಳಿಸಲಿ. ಅಗತ್ಯ ಬಿದ್ದರೆ ಪ್ರಾಧಿಕಾರದ ನಿಯೋಗ ರಾಜ್ಯಕ್ಕೆ ಬಂದು ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಾವು ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ ಎಂಬುದನ್ನು ಮನದಟ್ಟು ಮಾಡುವ ಕೆಲಸವನ್ನು ಸರ್ಕಾರ ಮಾಡಲಿ" ಎಂದು ಆಗ್ರಹಿಸಿದರು.
ಕೇಂದ್ರದ ಜಲ ಶಕ್ತಿ ಸಚಿವರನ್ನು ತಮಿಳುನಾಡು ಸಂಸದರ ನಿಯೋಗ ಭೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, "ತಮಿಳುನಾಡು ಸಂಸದರು ಯಾರನ್ನಾದರೂ ಭೇಟಿ ಮಾಡಲಿ. ಅವರ ಬಗ್ಗೆ ನಾನು ಚರ್ಚೆ ಮಾಡಲು ಇಷ್ಟಪಡಲ್ಲ. ಈ ವಿಚಾರದಲ್ಲಿ ನಾವು ಏನು ಹೇಳಬೇಕೋ ಅದನ್ನು ಸರ್ಕಾರಕ್ಕೆ ಹೇಳಿದ್ದೇವೆ. ಸುಪ್ರೀಂ ಕೋರ್ಟ್ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿ ನೀರಿಲ್ಲ ಎಂದು ಮನವರಿಕೆ ಮಾಡಿಕೊಡಲಿ" ಎಂದರು.
ಇದನ್ನೂ ಓದಿ:ಕಾವೇರಿ ವಿವಾದ: ಸುಪ್ರೀಂ ಕೋರ್ಟ್ಗೆ ವಾಸ್ತವಾಂಶ ತಿಳಿಸುತ್ತೇವೆ- ಡಿಸಿಎಂ ಡಿ.ಕೆ.ಶಿವಕುಮಾರ್