ಮನೆಯಲ್ಲಿ ಭೀಕರ ಸ್ಫೋಟ: ನಾಲ್ವರ ಸಾವು, 2 ಕಿಮೀವರೆಗೂ ಕೇಳಿಸಿದ ಸ್ಫೋಟದ ಸದ್ದು - etv bharat kannada
ಬುಲಂದ್‌ಶಹರ್(ಉತ್ತರಪ್ರಾದೇಶ):ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬುಲಂದ್‌ಶಹರ್ ಜಿಲ್ಲೆಯ ಕೊತ್ವಾಲಿ ನಗರದಲ್ಲಿ ನಡೆದಿದೆ. ಈ ಸ್ಫೋಟದ ಸದ್ದು 2 ಕಿಲೋಮೀಟರ್ ದೂರದವರೆಗೂ ಕೇಳಿಸಿದೆ. ಸ್ಫೋಟದ ರಭಸಕ್ಕೆ ಮನೆಯ ಕಿಟಕಿ, ಬಾಗಿಲುಗಳು ಮುರಿದು ಬಿದ್ದಿವೆ. ಸ್ಫೋಟಕ್ಕೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ವಿಷಯ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಈ ಮನೆಯಲ್ಲಿ ರಾಸಾಯನಿಕ ತಯಾರಿಸಲಾಗುತ್ತಿತ್ತು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಮನೆಯನ್ನು ಜಮೀನಿನ ಮಧ್ಯದಲ್ಲಿ ನಿರ್ಮಿಸಲಾಗಿದೆ. ಈ ಮನೆ ಜನದಟ್ಟಣೆಯಿಂದ ದೂರವಿದೆ. ಸ್ಫೋಟಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಸ್ಫೋಟದ ನಂತರ, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದುವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿವೆ. ಆದರೆ ಗುರುತು ಪತ್ತೆಯಾಗಿಲ್ಲ, ಇತರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಚಂದ್ರಪ್ರಕಾಶ್ ಸಿಂಗ್ ತಿಳಿಸಿದ್ದಾರೆ. ಸದ್ಯ ಸಿಕ್ಕಿರುವ ನಾಲ್ಕು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರ ಗುರುತು ಪತ್ತೆ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ.