ಧಾರವಾಡ: ನಿರಂತರ ಮಳೆಗೆ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿತ.. ನಾಲ್ವರು ವಿದ್ಯಾರ್ಥಿಗಳಿಗೆ ಗಾಯ - ಶಾಲೆಯ ಕಟ್ಟಡ
ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಮಳೆ ವಿಳಂಬವಾಗಿ ಆರಂಭಗೊಂಡಿದೆ. ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತಗೊಂಡು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಬೋಗೂರ ಗ್ರಾಮದಲ್ಲಿ ಇಂದು ನಡೆದಿದೆ. ಸರ್ಕಾರಿ ಶಾಲೆಯ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಕೊಠಡಿ ಕುಸಿತಗೊಂಡ ಕಾರಣ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಗರಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಸರ್ಕಾರಿ ಶಾಲೆಯ ಕಟ್ಟಡ ಬಹಳ ಹಳೆಯದಾಗಿದ್ದರಿಂದ ಮಳೆಗೆ ಕುಸಿದು ಬಿದ್ದಿದೆ. ಶಾಲೆಯ ಇನ್ನೂ ಸುಮಾರು ಮೂರು ಕೊಠಡಿಗಳು ಬೀಳುವ ಹಂತದಲ್ಲಿವೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಕಟ್ಟಡ ಹಳೆಯದಾಗಿದ್ದು, ಶಾಲೆಯನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಗಮನ ಹರಿಸಿಲ್ಲ. ಹೀಗಾಗಿ ಇಂದು ಏಕಾಏಕಿ ನಿರಂತರವಾಗಿ ಸುರಿದ ಮಳೆಗೆ ಇದೀಗ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಮಕ್ಕಳಿಗೆ ಗಾಯಗಳಾಗಿವೆ. ಇದರಿಂದಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಲೆಯ ಕಟ್ಟಡವನ್ನು ಪುನರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿತ: ಒಂದೇ ಕುಟುಂಬದ ಮೂವರ ಸಾವು, ಏಳು ಜನರಿಗೆ ಗಾಯ