ರಾಯಚೂರು: ಸೇವೆ ಖಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ - etv bharat kannada
Published : Dec 16, 2023, 8:28 PM IST
ರಾಯಚೂರು: ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮಾನವ ಸರಪಳಿ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅತಿಥಿ ಉಪನ್ಯಾಸಕರು ಮಾನವ ಸರಪಳಿ ನಿರ್ಮಿಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಟಿಪ್ಪು ಸುಲ್ತಾನ್ ಗಾರ್ಡನ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
2023 ನ.23ರಿಂದ ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿಗಳನ್ನ ಬಹಿಷ್ಕರಿಸಿ ರಾಜ್ಯದ ಆಯಾ ಜಿಲ್ಲಾ ಕೇಂದ್ರದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಧರಣಿ ನಡೆಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ರಾಜ್ಯ ಎಲ್ಲ ಜಿಲ್ಲೆಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳೊಂದಿಗೆ ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ಚರ್ಚೆ ನಡೆಸಿದ್ದರು. 2023 ಡಿ.1ರಂದು ಹಾಗೂ ಬೆಳಗಾವಿಯ ಸುವರ್ಣಸೌಧದ ಬಳಿ 2023 ಡಿ.7ರಂದು ಸಭೆಗೆ ಬಂದು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಮತ್ತು ಸಮಸ್ಯೆಗಳನ್ನು ಆಲಿಸಿದ್ದರು. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೆಳಗಾವಿ ಮಹಿಳಾ ವಿವಸ್ತ್ರ ಘಟನೆ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ