ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ವ್ಯವಸ್ಥೆ ಪರಿಶೀಲಿಸಿದ ಸಚಿವ ಸುನೀಲ್ ಕುಮಾರ್ - ವ್ಯವಸ್ಥೆ ಪರಿಶೀಲಿಸಿದ ಸಚಿವ ಸುನೀಲ್ ಕುಮಾರ್
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11ರಂದು ಪುತ್ತೂರಿನ ತೆಂಕಿಲ ಶಾಲಾ ಮೈದಾನಕ್ಕೆ ಆಗಮಿಸುವ ಹಿನ್ನೆಲೆ ಇಂದು ಮಧ್ಯಾಹ್ನ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್ ಅಂಗಾರ ಅವರು ತೆಂಕಿಲ ಮೈದಾನಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಸುನೀಲ್ ಕುಮಾರ್, ಫೆ. 11ರಂದು ಸಹಕಾರಿ ಮತ್ತು ರೈತ ಸಮ್ಮೇಳನ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಅವರು ಭಾಗವಹಿಸಲಿರುವುದರಿಂದ ಇಲ್ಲಿ ದೊಡ್ಡ ಪ್ರಮಾಣದ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ 75 ಸಾವಿರದಿಂದ 1 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಮಿತ್ ಶಾ ಅವರ ಆಗಮನ ಮುಂದಿನ ಚುನಾವಣೆಯ ದೃಷ್ಟಿಯಿಂದಲೂ ಕಾರ್ಯಕರ್ತರಲ್ಲಿ ಹುರುಪು ಮೂಡಿಸಲಿದೆ ಎಂದರು.
ಪುತ್ತೂರು ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಠೆ, ಪುತ್ತೂರು ಉಪವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ವೀರಯ್ಯ ಹಿರೇಮಠ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದಿರೆ, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಾರಾಂ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ರಾಧಾಕೃಷ್ಣ ಬೋರ್ಕರ್, ಚಂದ್ರಶೇಖರ್ ಬಪ್ಪಳಿಗೆ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಕ್ಯಾಂಪ್ಕೋ ಸುವರ್ಣ ಸಂಭ್ರಮ : ಪುತ್ತೂರಿಗೆ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಭೇಟಿ