6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಧರಣಿ - ಆರನೇ ವೇತನ ಆಯೋಗ
ಬೆಂಗಳೂರು: 7ನೇ ವೇತನ ಆಯೋಗ ಜಾರಿಗಾಗಿ ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸಿ, ಬೇಡಿಕೆ ಈಡೇರಿಕೆ ಬಳಿಕ ಇಂದು ವಾಪಸ್ ಪಡೆದಿದ್ದಾರೆ. ಮತ್ತೊಂದೆಡೆ 6ನೇ ವೇತನ ಆಯೋಗ ಜಾರಿಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಪ್ರತಿಭಟನೆಗಿಳಿದಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ ನಾಲ್ಕು ನಿಗಮ ಒಳಗೊಂಡ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ನಗರದ ಫ್ರೀಡಂಪಾರ್ಕ್ ಮುಂದೆ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡಿದೆ.
ಈ ಹಿಂದೆ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿ ಅವರು ಆರನೇ ವೇತನ ಆಯೋಗ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಅನುಷ್ಠಾನಗೊಳಿಸಿಲ್ಲ. ಸರ್ಕಾರಿ ನೌಕರರು 7ನೇ ವೇತನ ಆಯೋಗಕ್ಕೆ ಮುಷ್ಕರ ಕೈಗೊಂಡಿದ್ದಾರೆ. ಆದರೆ, ನಮಗಿನ್ನೂ 6 ವೇತನ ಆಯೋಗ ಜಾರಿ ಮಾಡಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ನೀತಿಯನ್ನು ಜಾರಿಗೆ ತರಬೇಕು.
1992ರ ಬಳಿಕ ಸಾರಿಗೆ ನಿಗಮಗಳಲ್ಲಿ ನೌಕರರ ಚುನಾವಣೆ ನಡೆದಿಲ್ಲ. ಹೀಗಾಗಿ ಚುನಾವಣೆ ನಡೆಸಬೇಕು. ಅಲ್ಲದೇ ಮುಷ್ಕರದ ವೇಳೆ ಸಾರಿಗೆ ನೌಕರರ ಮೇಲೆ ಹೂಡಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಪ್ರಧಾನ ಕಾರ್ಯದರ್ಶಿ ಎಸ್.ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ನೋಡಿ:ಪಿಂಚಣಿ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ