ನನ್ನ ಪ್ರಕಾರ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ.. ಜೆಡಿಎಸ್ ಜೊತೆ ಮೈತ್ರಿ ಮಾತೇ ಇಲ್ಲ: ಜಗದೀಶ್ ಶೆಟ್ಟರ್ - ಜೆಡಿಎಸ್ ಜೊತೆ ಮೈತ್ರಿ
ಹುಬ್ಬಳ್ಳಿ: ''ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬೇರೆ ಯಾವುದೇ ಪಕ್ಷದೊಂದಿಗೆ ಹಾಗೂ ವಿಶೇಷವಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ'' ಎಂದು ಮಾಜಿ ಸಿಎಂ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇಲ್ಲಿ ತಮ್ಮ ನಿವಾಸದಲ್ಲಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ''ನನ್ನ ಅಭಿಪ್ರಾಯದ ಪ್ರಕಾರ, ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಲಭಿಸಲಿದೆ. ಚುನಾವಣೆ ಪ್ರಕ್ರಿಯೆಯನ್ನು ಬಿಜೆಪಿ ಪಕ್ಷವು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ'' ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಮೊದಲಿನಿಂದಲೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಮತ್ತು 6 ಬಾರಿ ಭಾರತೀಯ ಜನತಾ ಪಕ್ಷದಿಂದ ಗೆದ್ದು ಬಂದಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. ಬಳಿಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡಕ್ಕಿಳಿದರು. ಇದೀಗ ಅವರ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದ್ದು, ಕುತೂಹಲ ಮೂಡಿಸಿದೆ.
ಇವುಗಳನ್ನು ಓದಿ:ಬೆಂಗಳೂರಿನ 28 ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇಕಡಾವಾರು ಮತದಾನ ಎಷ್ಟು? ಇಲ್ಲಿದೆ ಮಾಹಿತಿ