ರಾಯಚೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ವರಿಷ್ಠರಿಗೆ ಒತ್ತಾಯ : ಶಾಸಕಿ ಜಿ ಕರೆಮ್ಮ ನಾಯಕ
Published : Sep 25, 2023, 6:11 PM IST
ರಾಯಚೂರು : ರಾಯಚೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಲಾಗುವುದು ಎಂದು ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಮೈತ್ರಿ ಸಂಬಂಧ ಪಕ್ಷದ ವರಿಷ್ಠರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಮ್ಮ ಸಹಮತವಿದೆ. ಯಾಕೆಂದರೆ ಪಕ್ಷದ ವರಿಷ್ಠರು ಆಗಿರುವ ದೇವೇಗೌಡರು ನನ್ನನ್ನು ಮಗಳಂತೆ ಭಾವಿಸಿ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಹಾಗಾಗಿ ಮೈತ್ರಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ. ಇದರಿಂದ ನಮ್ಮ ಪಕ್ಷದಲ್ಲಿ ಮತ್ತು ಪಕ್ಷದ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ನನ್ನ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ನಾನು ಈ ರೀತಿ ಹೇಳಿದ್ದೇನೆ. ಆದರೆ ಈಗ ಆಗಿರುವ ಮೈತ್ರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕೆ. ಶಿವನಗೌಡ ನಾಯಕ ಟಿಕೆಟ್ ದೊರೆತರೆ ಬೆಂಬಲಿಸುತ್ತಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾವು ನಮ್ಮ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡುತ್ತೇವೆ. ಯಾಕೆಂದರೆ ಈ ಭಾಗದಲ್ಲಿ ಸನ್ಮಾನ್ಯ ದೇವೇಗೌಡರು ನೀರಾವರಿ ಸೌಲಭ್ಯ ಒದಗಿಸಿದ್ದಾರೆ. ಜೊತೆಗೆ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಸಂಬಂಧ ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಚುನಾವಣೆಗೆ ಇಳಿಸುವಂತೆ ಕೇಳಿಕೊಳ್ಳುವುದಾಗಿ ತಿಳಿಸಿದರು.
ಇದನ್ನೂ ಓದಿ :ಹೆಚ್ ಡಿ ಕುಮಾರಸ್ವಾಮಿ ಅಸ್ತಿತ್ವ ಉಳಿಸಿಕೊಳ್ಳಲು ದೆಹಲಿಗೆ ತೆರಳಿ ಕಾಲಿಗೆ ಬಿದ್ದು ಬಂದಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ