ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಕೈ ಕಾರ್ಯಕರ್ತರಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ - ಕಾಂಗ್ರೆಸ್ ಹೈಕಮಾಂಡ್
ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಚೆನ್ನಮ್ಮ ವೃತ್ತದವರೆಗೆ ಬೃಹತ್ ಮೆರವಣಿಗೆ ಮೂಲಕ ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಬೆಂಬಲಿಗರು, ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪ್ರಸಾದ್ ಅಬ್ಬಯ್ಯಯವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ಪ್ರಸಾದ್ ಅಬ್ಬಯ್ಯ ಅವರಿಗೆ ಜಯವಾಗಲಿ, ಸಚಿವ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಲಿ ಎಂದು ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಂದರ್ಭದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದೊರಾಜ್ ಮನ್ನೆಕುಂಟ್ಲಾ, ನಿರಂಜನಯ್ಯ ಹಿರೇಮಠ, ಇಮ್ರಾನ್ ಎಲಿಗಾರ, ಸುಧಾ ಮನ್ನೆಕುಂಟ್ಲಾ, ಪ್ರಕಾಶ ಬುರಬುರೆ, ಇಲಿಯಾಸ್ ಮನಿಯಾರ್, ಬೆಂಬಲಿಗರಾದ ಗುರುನಾಥ ಉಳ್ಳಿಕಾಶಿ, ಉಜ್ವಲ್ ಗುಣವಿ, ಚೇತನ್ ಹಿರೇಕೆರೂರ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ನೋಡಿ:ಕ್ಯಾನ್ಸ್ ಚಲನಚಿತ್ರೋತ್ಸವ 2023: ನಕಲಿ ರಕ್ತವನ್ನು ಸುರಿದುಕೊಂಡು ಉಕ್ರೇನಿಯನ್ ಬ್ಲಾಗರ್ ಪ್ರತಿಭಟನೆ