ಕೊಡಗಿನಲ್ಲಿ ವಿಶ್ವ ಹಿಂದೂ ಪರಿಷತ್ನಿಂದ ಪಂಜಿನ ಮೆರವಣಿಗೆ: ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ, ಪರಿಶೀಲನೆ
ಕೊಡಗು:ಆಗಸ್ಟ್ 9ರಿಂದ 17ರವರೆಗೆ ವಿಶ್ವ ಹಿಂದೂ ಪರಿಷತ್ನಿಂದ ಜಿಲ್ಲಾದ್ಯಂತ ಅಖಂಡ ಭಾರತ ಸಂಕಲ್ಪ ಯಾತ್ರೆ ಆಯೋಜಿಸಲಾಗಿದ್ದು, ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ. ಯಾತ್ರೆ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಗೆ ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ ಬೋರಲಿಂಗಯ್ಯ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಮಡಿಕೇರಿ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ಕೇಂದ್ರಗಳು ಸೇರಿದಂತೆ ಹೋಬಳಿ ಮಟ್ಟದಲ್ಲೂ ಕೂಡ ಪಂಜಿನ ಮೆರವಣಿಗೆ ನಡೆಯಲಿದೆ. ಈ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಬೋರಲಿಂಗಯ್ಯ ಸೂಚನೆ ನೀಡಿದರು.
ಈ ಹಿಂದೆ ಪಂಜಿನ ಮೆರವಣಿಗೆ ವೇಳೆ ಕೆಲ ಅಹಿತಕರ ಘಟನೆಗಳು ನಡೆದಿದ್ದ ಕಾರಣ ಪೊಲೀಸರು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದ್ದಾರೆ. ಪಂಜಿನ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾಕಷ್ಟು ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಗೂ ಡ್ರೋನ್ ಕ್ಯಾಮರಾ ಕಣ್ಗಾವಲು ಇರಲಿದೆ. ಅಹಿತಕರ ಘಟನೆ ನಡೆಯದಂತೆ ಶಾಂತಿಯುತ ಕಾರ್ಯಕ್ರಮ ನಡೆಯಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಮಾಹಿತಿ ನೀಡಿದರು.