ಡಿಸಿಎಂ ಡಿಕೆಶಿ ಭೇಟಿಯಾದ ಆಂಧ್ರ ಸಿಎಂ ಸಹೋದರಿ ವೈ.ಎಸ್.ಶರ್ಮಿಳಾ ರೆಡ್ಡಿ- ವಿಡಿಯೋ
ಬೆಂಗಳೂರು: ತೆಲಂಗಾಣ ವೈ.ಎಸ್.ಆರ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ರೆಡ್ಡಿ ಅವರು ಇಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಶರ್ಮಿಳಾ ಅವರು ಡಿ.ಕೆ.ಶಿವಕುಮಾರ್ ಅವರ ಜತೆ ಕೆಲ ಕಾಲ ಮಾತುಕತೆ ನಡೆಸಿದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ರೆಡ್ಡಿ ಉಪ ಮುಖ್ಯಮಂತ್ರಿ ಡಿಕೆಶಿ ಅವರನ್ನು ಭೇಟಿಯಾಗಿ ಸೌಹಾರ್ದಯುತವಾಗಿ ಶುಭ ಕೋರಿದರು. ಡಿ.ಕೆ.ಶಿವಕುಮಾರ್ ಬಗ್ಗೆ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ಇದೇ ವರ್ಷ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಭಯ ನಾಯಕ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್.ಶರ್ಮಿಳಾ ರೆಡ್ಡಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು ವೈ.ಎಸ್.ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕರು. ಸಿಎಂ ಕೆ. ಚಂದ್ರಶೇಖರ್ ರಾವ್ ಸರ್ಕಾರದ ವಿರುದ್ಧ ಹೋರಾಟ ಮಾಡುವ ಮೂಲಕ ಈ ವರ್ಷ ನಡೆಯುವ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.