ಕರ್ನಾಟಕ ಬಂದ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳ ವಿರುದ್ಧ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಂದು ಬೆಳಗ್ಗೆಯಿಂದಲೇ ಹಲವಾರು ಸಂಘಟನೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಈ ಕಾಯ್ದೆಗಳನ್ನು ತಿದ್ದುಪಡಿ ತರುವ ಮೂಲಕ ರೈತರನ್ನು ಈ ಹಿಂದಿನ ಉಳಿಗಮಾನ್ಯ ಪದ್ಧತಿಗೆ ಒಳಪಡಿಸಲು ಸಂಚು ನಡೆಸುತ್ತಿದ್ದಾರೆ. ಈ ಮೂಲಕ ರೈತರು ಭೂಮಿ ಕಳೆದುಕೊಂಡು, ಶಾಶ್ವತ ಕೂಲಿಯಾಳುಗಳಾಗಿ ಬಂಡವಾಳಶಾಹಿಗಳ ಅಡಿಯಲ್ಲಿ ಬದುಕಬೇಕಾಗುತ್ತದೆ ಎಂದು ಆರೋಪಿಸಿ ಹಲವಾರು ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಅಂಗಡಿ-ಮುಂಗಟ್ಟುಗಳ ಮಾಲೀಕರು, ಲಾರಿ ಚಾಲಕರು, ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು ಬೆಂಬಲ ಸೂಚಿಸಿದ್ದಾರೆ.