ರಾಯಚೂರು: ಮನ್ ಕೀ ಬಾತ್ ವಿರೋಧಿಸಿ ತಟ್ಟೆ ಬಾರಿಸಿ ಪ್ರತಿಭಟನೆ - ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮ
ರಾಯಚೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡುವ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮ ವಿರೋಧಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪದಾಧಿಕಾರಿಗಳು ತಟ್ಟೆ ಬಾರಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪದಾಧಿಕಾರಿಗಳು ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ರೈತ ವಿರೋಧಿ ಕಾಯ್ದೆ ಹಿಂಪಡೆಯಲು ದೆಹಲಿಯಲ್ಲಿ ರೈತರು ಬೀದಿಗಿಳಿದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆ ಆಲಿಸಲು ಆಗದ ಪ್ರಧಾನಿ ದೇಶದ ಜನತೆಯನ್ನು ಉದ್ದೇಶಿಸಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡುವುದರಲ್ಲಿ ಅರ್ಥವಿಲ್ಲ. ಪ್ರಧಾನಿ ಅವರಿಗೆ ರೈತರ ಸಮಸ್ಯೆ ಪರಿಹರಿಸುವ ಇಚ್ಚೆಯಿಲ್ಲ. ಬಂಡವಾಳಶಾಹಿಗಳ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ 30 ದಿನಗಳಿಂದ ರೈತರು ದೆಹಲಿಯಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಈ ವೇಳೆ ಹಲವು ರೈತರು ಪ್ರಾಣತ್ಯಾಗ ಮಾಡಿದ್ದಾರೆ. ರೈತರ ಪ್ರಾಣಕ್ಕೆ ಬೆಲೆ ನೀಡದ ಪ್ರಧಾನ ಮಂತ್ರಿಗಳ ಮನ್ ಕೀ ಬಾತ್ ಕಾರ್ಯಕ್ರಮ ಬೇಡವೇ ಬೇಡ ಎಂದು ತಟ್ಟೆ ಬಾರಿಸಿ ಆಕ್ರೋಶ ವ್ಯಕ್ತಪಡಿಸಿದರು.