ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಇಲ್ಲ: ರೇಣುಕಾಚಾರ್ಯ - M. P. Renukacharya
ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಜಿಲ್ಲೆಯ ನ್ಯಾಮತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಹಂತ ಹಂತವಾಗಿ ಕೈಗಾರಿಕೆಗಳು, ವ್ಯಾಪಾರ ವಹಿವಾಟು ಆರಂಭವಾಗುತ್ತಿದೆ. ಲಾಕ್ಡೌನ್ ಮಾಡಿದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಭಾರೀ ನಷ್ಟ ಆಗಿದೆ. ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಮತ್ತೆ ಲಾಕ್ಡೌನ್ ಮಾಡಲ್ಲ ಎಂದರು. ಕ್ವಾರಂಟೈನ್ ಪ್ರದೇಶಗಳಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಜನರೂ ಸಹ ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಉಪಯೋಗಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.