ಕೇಂದ್ರ ಸರ್ಕಾರದಿಂದ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - ಜಿಎಸ್‌ಟಿ ಹೆಚ್ಚಳ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ದಿನನಿತ್ಯದ ಅಗತ್ಯ ವಸ್ತುಗಳ ಮೇಲೆ ಜಿ.ಎಸ್.ಟಿ ಏರಿಸಿ ಜನರ ಜೀವನವನ್ನು ದುಸ್ತರ ಮಾಡುತ್ತಿರುವ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು. ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಕೋರಮಂಗಲದಲ್ಲಿರುವ ಜಿಎಸ್‌ಟಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ನೇತೃತ್ವವನ್ನು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಹಿಸಿದ್ದರು. ಜಿಎಸ್‌ಟಿ ಕೇಂದ್ರ ಕಚೇರಿ ಮುಂದೆ ಜಮಾಯಿಸಿದ ಸುಮಾರು 150-200 ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮೊಸರು, ಮಜ್ಜಿಗೆ ಮೇಲೆ ಹಾಕಿರುವ ಜಿಎಸ್‌ಟಿ ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿತ್ತು. ಕಾಂಗ್ರೆಸ್ ಪ್ರತಿಭಟನೆ ಹಿನ್ನಲೆ ಜಿಎಸ್‌ಟಿ ಕಚೇರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.