ರಾಯ್‌ಪುರ (ಛತ್ತೀಸ್‌ಗಢ):ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್ (ಕೋಬ್ರಾ) ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದರು.
ಗುಂಡಿನ ಚಕಮಕಿ ನಿಂತ ನಂತರ, ನಾಲ್ವರು ನಕ್ಸಲೀಯರ ಶವಗಳು ಮತ್ತು ಲಘು ಮಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಬಿಜಾಪುರವು ಛತ್ತೀಸ್‌ಗಢ ರಾಜ್ಯದ ರಾಜಧಾನಿ ರಾಯ್ಪುರದಿಂದ 400 ಕಿಲೋ ಮೀಟರ್ ದೂರದಲ್ಲಿದೆ.
ಈ ಘಟನೆ ಜೊತೆಗೆ ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಈ ವರ್ಷ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈವರೆಗೆ 37 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಕ್ಷೇತ್ರದಲ್ಲಿ ಏಪ್ರಿಲ್ 19 ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯಲಿದೆ.
ಇದನ್ನೂ ಓದಿ:ಜ್ಞಾನವಾಪಿಯಲ್ಲಿ ಪೂಜೆಗಿಲ್ಲ ತಡೆ: ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ನಲ್ಲೂ ಮಸೀದಿ ಸಮಿತಿಗೆ ಹಿನ್ನಡೆ - Gyanvapi Row