ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದೆ. ರಾಜ್ಯದ ಎಲ್ಲ 13 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಸಿಎಂ ಭಗವಂತ್ ಮಾನ್ ಪ್ರಕಟಿಸಿದ್ದಾರೆ. ಇದಕ್ಕೂ ಮೊದಲು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಸಿಎಂ ಸಹ ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು. ಈಗ ಆಪ್ನ ಈ ನಿರ್ಧಾರವೂ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನೆಡೆಯನ್ನುಂಟು ಮಾಡಿದೆ.
ಪಂಜಾಬ್ ಸಿಎಂ ಮತ್ತು ಎಎಪಿ ನಾಯಕ ಭಗವಂತ್ ಮಾನ್ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, "ಪಂಜಾಬ್‌ನಲ್ಲಿ ನಾವು ಯಾವ ಮೈತ್ರಿಯನ್ನೂ ಮಾಡಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಪಕ್ಷ ಈಗಾಗಲೇ ಎಲ್ಲ 13 ಲೋಕಸಭಾ ಸ್ಥಾನಗಳಿಗೆ 40 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮೊದಲು ನಾವು ಸಮೀಕ್ಷೆಯನ್ನು ನಡೆಸುತ್ತಿದ್ದು, ಸಮೀಕ್ಷಾ ಫಲಿತಾಂಶದ ಬಳಿಕ ಅಭ್ಯರ್ಥಿಗಳನ್ನು ಫೈನಲ್ ಮಾಡುವುದಾಗಿ ಅವರು ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗಾಲೇ ಸ್ಪಷ್ಟಪಡಿಸಿದ್ದಾರೆ. "ನಾನು ಅವರಿಗೆ ಸೀಟು ಹಂಚಿಕೆ ಪ್ರಸ್ತಾವನೆಯನ್ನು ನೀಡಿದ್ದೆ, ಆದರೆ ಅವರು ಅದನ್ನು ಆರಂಭದಲ್ಲಿ ನಿರಾಕರಿಸಿದರು. ನಮ್ಮ ಪಕ್ಷವು ಈಗ ಬಂಗಾಳದಲ್ಲಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ನಿರ್ಧರಿಸಿದೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಯಾರೊಂದಿಗೂ ಮಾತನಾಡಿಲ್ಲ ಎಂದು ಬಂಗಾಳ ಸಿಎಂ ಇದೇ ವೇಳೆ ದೃಢಪಡಿಸಿದ್ದರು.