ಗುವಾಹಟಿ (ಅಸ್ಸೋಂ) :ಅಸ್ಸೋಂ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಹಿರಿಯ ನಾಯಕ ರಾಣಾ ಗೋಸ್ವಾಮಿ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿ ಬಂದಿದೆ. ಕ್ರಿಮಿನಲ್ ಹಿನ್ನೆಲೆ ಇಲ್ಲದ ಯಾರೇ ಪಕ್ಷ ಸೇರಿದರೂ ಸ್ವಾಗತ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಗೋಸ್ವಾಮಿ ಅವರು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾಗಿ ಅದರಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ಸೇರ್ಪಡೆಗೆ ಸಿದ್ಧತೆ?:ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಇದರ ಹಿನ್ನೆಲೆಯಲ್ಲಿ ಹಿರಿಯ ನಾಯಕರಾಗಿರುವ ರಾಣಾ ಗೋಸ್ವಾಮಿ ಅವರು ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ. ಮಾರ್ಚ್ 4 ರಂದು ಬಿಜೆಪಿ ಸೇರುವ ಸಾಧ್ಯತೆಗಳು ದಟ್ಟವಾಗಿವೆ. ಅವರು ಇಂದು (ಬುಧವಾರ) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ರಾಣಾ ಗೋಸ್ವಾಮಿ ಅವರು ಮೂರು ಬಾರಿ ಅಸ್ಸೋಂ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2006 ರಲ್ಲಿ ಜೋರ್ಹತ್ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ರಾಣಾ ಅವರು ಬಿಜೆಪಿ ಸೇರಲು ನಿರ್ಧರಿಸಿದರೆ ಪಕ್ಷಕ್ಕೆ ಸ್ವಾಗತಿಸುವುದಾಗಿ ಸಿಎಂ ಈ ಹಿಂದೆ ಹೇಳಿದ್ದರು.