ಮುಂಬೈ:ಮುಂಬೈನಲ್ಲಿ ಹತ್ಯೆಗೀಡಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾನುವಾರ ಘೋಷಿಸಿದ್ದಾರೆ. 2004-2008ರ ಅವಧಿಯಲ್ಲಿ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಮತ್ತು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಎಂಎಚ್ಎಡಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಿದ್ದಿಕಿ ಅವರಿಗೆ ಸಕಲ ಸರ್ಕಾರಿ ಗೌರವಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ತಿಳಿಸಿದೆ.
ಏತನ್ಮಧ್ಯೆ, ಸಿದ್ದಿಕಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗವು ಭಾರತೀಯ ನ್ಯಾಯ ಸಂಹಿತಾ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ನಿರ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ನಿರ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ನೋಂದಣಿ ಸಂಖ್ಯೆ 589/2024, ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 103 (1), 109, 125 ಮತ್ತು 3 (5), ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3, 25, 5 ಮತ್ತು 27 ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 37 ಮತ್ತು ಸೆಕ್ಷನ್ 137 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೆಹಲಿ ಪೊಲೀಸರ ತಂಡ ಮುಂಬೈಗೆ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ ಪ್ರಕರಣದ ತನಿಖೆಗಾಗಿ ದೆಹಲಿ ಪೊಲೀಸರು ವಿಶೇಷ ತನಿಖಾ ತಂಡವನ್ನು ಮುಂಬೈಗೆ ಕಳುಹಿಸಲಿದ್ದಾರೆ ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್ ಮೂಲಗಳು ತಿಳಿಸಿವೆ. ಮುಂಬೈನಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಗ್ಯಾಂಗಸ್ಟರ್ಗಳು ಈ ಕೃತ್ಯ ಎಸಗಿರಬಹುದು ಎಂದು ಮೂಲಗಳು ಹೇಳಿವೆ.