ಪಾಟ್ನಾ (ಬಿಹಾರ):ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಜೆಡಿಯು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ ಬಳಿಕದ ರಾಷ್ಟ್ರ ರಾಜಧಾನಿಗೆ ನೀಡುತ್ತಿರುವ ಮೊದಲ ಭೇಟಿ ಮತ್ತು ಮೋದಿಯೊಂದಿಗಿನ ಮೊದಲ ಭೇಟಿಯೂ ಇದಾಗಿದೆ.
ಸಿಎಂ ನಿತೀಶ್ಕುಮಾರ್ ಅವರು ಫೆಬ್ರವರಿ 12 ರಂದು ವಿಶ್ವಾಸ ಮತ ಪರೀಕ್ಷೆಗೆ ಒಳಗಾಗಲಿದ್ದು, ಇದಕ್ಕೂ ಐದು ದಿನಗಳ ಮುಂಚಿತವಾಗಿ ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ನಿತೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿ ಮಾಡುವ ನಿರೀಕ್ಷೆಯಿದೆ. ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಅವರು ಸೋಮವಾರವಷ್ಟೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.
ರಾಜ್ಯಸಭೆ ಚುನಾವಣೆ ಬಗ್ಗೆ ಚರ್ಚೆ:ಜೆಡಿಯು ಮೂಲಗಳ ಪ್ರಕಾರ, ಬಿಹಾರದ ಆರು ರಾಜ್ಯಸಭಾ ಸ್ಥಾನಗಳು ತೆರವಾಗಲಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದ ವಿಷಯದ ಬಗ್ಗೆಯೂ ಸಿಎಂ ನಿತೀಶ್ ಬಿಜೆಪಿಯ ಉನ್ನತ ನಾಯಕರೊಂದಿಗಿನ ಸಭೆ ನಡೆಸಿ ಚರ್ಚಿಸಬಹುದು ಎಂದು ತಿಳಿದು ಬಂದಿದೆ.