ಮುಂಬೈ: ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಿದರು. ಶಿವಸೇನೆಯ (ಶಿಂಧೆ ಬಣ) ಮುಖ್ಯಸ್ಥ ಏಕನಾಥ್ ಶಿಂಧೆ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಕೈಗೊಂಡರು.
ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಇಂದು ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಅಧಿಕಾರದ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಜ್ಯೋತಿರಾದಿತ್ಯ ಸಿಂಧಿಯಾ, ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು, ಪ್ರಮುಖ ನಟರು, ಎಲ್ಲಾ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಬಾಲಿವುಡ್ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್, ರಣಬೀರ್ ಕಪೂರ್ ಮತ್ತು ರಣವೀರ್ ಸಿಂಗ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ ಪ್ರಮುಖ ಸೆಲೆಬ್ರಿಟಿಗಳೂ ಸಹ ಸಮಾರಂಭಕ್ಕೆ ಸಾಕ್ಷಿಯಾದರು. ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಕಾರ್ಯಕರ್ತರು ಕೂಡಾ ಆಗಮಿಸಿದ್ದರು.