ಮುಂಬೈ(ಮಹಾರಾಷ್ಟ್ರ):ಮುಂಬೈನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ವರ್ಲಿ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಬಿಎಂಡಬ್ಲ್ಯು ಕಾರು ಬೈಕ್‌ನಲ್ಲಿ ತೆರಳುತ್ತಿದ್ದ ಮೀನುಗಾರ ದಂಪತಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಕಾವೇರಿ ನಖ್ವಾ (45) ಎಂದು ಗುರುತಿಸಲಾಗಿದೆ. ಇವರ ಪತಿ ಪ್ರದೀಪ್ ನಖ್ವಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ದಂಪತಿ ಮೀನು ಸಂಗ್ರಹಿಸಲು ತಮ್ಮ ಬೈಕ್‌ನಲ್ಲಿ ಸಸೂನ್ ಡಾಕ್‌ಗೆ ಹೋಗಿ ಮಾರುಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ, ವರ್ಲಿಯ ಏಟ್ರಿಯಾ ಮಾಲ್‌ನ ಮುಂಭಾಗ ಹಿಂದಿನಿಂದ ಬಂದ ಕಾರು ಇವರಿದ್ದ ಬೈಕ್‌ಗೆ ಡಿಕ್ಕಿಯಾಗಿದೆ.
ಅಪಘಾತದ ನಂತರ ಸ್ಥಳದಲ್ಲಿದ್ದ ಜನರು ದಂಪತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಾಗಲೇ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.