ಶ್ರೀನಗರ, ಜಮ್ಮು ಮತ್ತು ಕಾಶ್ಮೀರ:ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಘೋರ ದುರಂತವೊಂದು ಸಂಭವಿಸಿದೆ. ಇಲ್ಲಿನ ಅಖ್ನೂರ್‌ನಲ್ಲಿ ವಾಹನವೊಂದು ಕಣಿವೆ ಬಿದ್ದು, 21 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮ್ಮು ಮತ್ತು ಪೂಂಛ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ (ಇಂದು) ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಹರ್ಯಾಣದ ಕುರುಕ್ಷೇತ್ರದಿಂದ ಬರುತ್ತಿದ್ದ ಬಸ್ ಇಲ್ಲಿನ ಅಖ್ನೂರ್ ಎಂಬಲ್ಲಿ ತೆರಳುತ್ತಿದ್ದಾಗ, ಆಯತಪ್ಪಿ ಕಣಿವೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್‌ನಲ್ಲಿ 80ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹರ್ಯಾಣದಿಂದ ಯಾತ್ರಾರ್ಥಿಗಳು ಶಿವಖೋರಿಗೆ ತೆರಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಬಸ್ 150 ಅಡಿ ಆಳದ ಕಣಿವೆಗೆ ಬಿದ್ದಿರುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಶಂಕಿಸಲಾಗಿದೆ. ನುಜ್ಜುಗುಜ್ಜಾದ ಬಸ್ನಿಂದ ಮೃತ ದೇಹಗಳನ್ನು ಹೊರತೆಗೆಯಲಾಗುತ್ತಿದೆ.
ರಾಷ್ಟ್ರಪತಿ, ಪ್ರಧಾನಿ ಸಂತಾಪ - ಪರಿಹಾರ ಘೋಷಣೆ:ಭೀಕರ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ದ್ರೌಪದಿ ಮುರ್ಮು ಅವರು, ಬಸ್ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ದುರಂತದಲ್ಲಿ ಯಾತ್ರಾರ್ಥಿಗಳು ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಇನ್ನೂ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಸ್ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಸಂತಾಪಗಳು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಎಲ್ಲ ಕುಟುಂಬಗಳಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ಮೃತ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಬಿಹಾರದಲ್ಲಿ 24 ತಾಸಲ್ಲಿ ಬಿಸಿಲ ತಾಪಕ್ಕೆ 19 ಮಂದಿ ಸಾವು, ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರ - heavy heat wave