ನವದೆಹಲಿ:ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2024ರಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಸಮಗ್ರ ತನಿಖೆಗಾಗಿ ಶಿಕ್ಷಣ ಸಚಿವಾಲಯ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿದ ಬೆನ್ನಲ್ಲೇ, ತನಿಖಾ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ.
ವೈದ್ಯಕೀಯ ಪ್ರವೇಶಾತಿ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಕೂಗು ಕೇಳಿಬಂದಿದ್ದು, ಬಿಹಾರದಲ್ಲಿ ಕಿಂಗ್ಪಿನ್, ಮಾಸ್ಟರ್ಮೈಂಡ್, ಅಭ್ಯರ್ಥಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಆಗ್ರಹ ಕೇಳಿಬಂದ ಕಾರಣ, ಶಿಕ್ಷಣ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.
ಮಹಾರಾಷ್ಟ್ರದಲ್ಲಿ ಶಿಕ್ಷಕರ ಬಂಧನ:ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಬಿಹಾರದಿಂದ ಮಹಾರಾಷ್ಟ್ರಕ್ಕೂ ಹಬ್ಬಿದೆ. ಸೋರಿಕೆ ಆರೋಪದ ಮೇಲೆ ನಾಂದೇಡ್ನ ಉಗ್ರ ನಿಗ್ರಹ ದಳ(ಎಟಿಎಸ್) ಲಾತೂರ್‌ನಲ್ಲಿ ಇಬ್ಬರು ಶಿಕ್ಷಕರನ್ನು ಬಂಧಿಸಿದೆ. ಸಂಜಯ್ ಜಾಧವ್ ಮತ್ತು ಜಲೀಲ್ ಪಠಾಣ್ ಬಂಧಿತರು. ಇವರು ಲಾತೂರ್ ಹಾಗೂ ಸೊಲ್ಲಾಪುರ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಬ್ಬರನ್ನು ಎಟಿಎಸ್ ಅಧಿಕಾರಿಗಳು ದೀರ್ಘಕಾಲದವರೆಗೆ ವಿಚಾರಣೆ ನಡೆಸಿದ್ದಾರೆ. ನಂತರ ಬಿಡುಗಡೆ ಮಾಡಿದ್ದಾರೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಬರಬೇಕು ಎಂದು ಸೂಚಿಸಿದ್ದಾರೆ.
ನೀಟ್ ಪರೀಕ್ಷೆಯ ವೇಳೆ ಬಿಹಾರದಂತೆ ಮಹಾರಾಷ್ಟ್ರದಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಕೋಚಿಂಗ್ ಸೆಂಟರ್ಗಳನ್ನು ನಡೆಸುತ್ತಿರುವ ಶಿಕ್ಷಕರು ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಎಟಿಎಸ್ ತಂಡವು ಲಾತೂರ್ನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿ ಇಬ್ಬರನ್ನು ಶನಿವಾರ ರಾತ್ರಿ ಬಂಧಿಸಿದೆ.
ಇದನ್ನೂ ಓದಿ:ನೀಟ್-ಯುಜಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ - NEET UG Question Paper Leak