ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸನ್ನು ತ್ವರಿತವಾಗಿ ಅಂಗೀಕರಿಸಿರುವ ಕೇಂದ್ರ ಸರ್ಕಾರ ಮಂಗಳವಾರ ನ್ಯಾಯಮೂರ್ತಿಗಳಾದ ಎನ್ ಕೋಟಿಶ್ವರ್ ಸಿಂಗ್ ಮತ್ತು ಆರ್ ಮಹಾದೇವನ್ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ.
ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, "ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರೊಂದಿಗೆ ಸಮಾಲೋಚಿಸಿದ ನಂತರ ಇಬ್ಬರು ನ್ಯಾಯಾಧೀಶರನ್ನು ನೇಮಕ ಮಾಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ" ಎಂದು ಹೇಳಿದ್ದಾರೆ.
ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ 11 ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಮತ್ತು ಮದ್ರಾಸ್ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನು ಸುಪ್ರೀಂ ಕೋರ್ಟ್ಗೆ ಬಡ್ತಿ ನೀಡಲು ಶಿಫಾರಸು ಮಾಡಿದ ಐದು ದಿನಗಳಲ್ಲಿ ಕೇಂದ್ರ ಸರ್ಕಾರ ಈ ಹೆಸರುಗಳಿಗೆ ಒಪ್ಪಿಗೆ ನೀಡಿದೆ.
ನ್ಯಾಯಮೂರ್ತಿಗಳಾದ ಸಿಂಗ್ ಮತ್ತು ಮಹಾದೇವನ್ ಅವರ ಪ್ರಮಾಣ ವಚನದ ನಂತರ, ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿದೆ.