ನವದೆಹಲಿ:ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಏಪ್ರಿಲ್ 29ರೊಳಗೆ ಸೂಕ್ತ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲು ಚುನಾವಣಾ ಆಯೋಗವೂ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಕೋರ್ಟ್‌ಗೆ ಈ ಮಾಹಿತಿ ನೀಡಿದರು. ಚುನಾವಣಾ ಆಯೋಗವು ಕೇಂದ್ರ ಸರ್ಕಾರಕ್ಕೆ ಸಮಸ್ಯೆ ಪರಿಹರಿಸಲು ಅವಕಾಶ ನೀಡಿದೆ. ಮುಂದಿನ ಸೋಮವಾರದೊಳಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ಮಾಹಿತಿ ನೀಡಿದರು.
ಕೇಂದ್ರ-ರಾಜ್ಯಗಳ ಮಧ್ಯೆ ಸೌಹಾರ್ದತೆ ಮುಖ್ಯ- ಕೋರ್ಟ್: ತನ್ನ ಪಾಲಿನ ಬರ ಪರಿಹಾರ ಕೊಡಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕೋರ್ಟ್, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದೆ. ಬಳಿಕ ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ಬರ ಪರಿಹಾರಕ್ಕೆ ಹಣಕಾಸು ನೆರವು ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.
ಕರ್ನಾಟಕದ ವಾದವೇನು?:ಕರ್ನಾಟಕದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ. "ಸಂಕಷ್ಟಕ್ಕೆ ತುತ್ತಾದ ಜನರಿಗೆ ಬರ ಪರಿಹಾರ ವಿತರಣೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆಗೆ ತ್ವರಿತ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶಿಸಬೇಕು" ಎಂದು ಅವರು ವಾದಿಸಿದ್ದಾರೆ.
"ರಾಜ್ಯ ಗಂಭೀರ ಮಾನವೀಯ ಸಂಕಷ್ಟ, ವಿಪತ್ತು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬರ ಪರಿಹಾರಕ್ಕಾಗಿ 35,162 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಪ್ರಕಾರ, ಬರಗಾಲದ ಹಣಕಾಸಿನ ನೆರವು ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ಕ್ರಮವು ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆ" ಎಂದು ಕರ್ನಾಟಕ ವಾದಿಸಿದೆ.
ಕರ್ನಾಟಕದ ಬರ ಪರಿಸ್ಥಿತಿ: ಕರ್ನಾಟಕ ಭೀಕರ ಬರಗಾಲ ಪರಿಸ್ಥಿತಿಯನ್ನು ಎದುರಿಸುತ್ತಿದೆ. 2023ರ ಖಾರಿಫ್ ಋತುವಿನಲ್ಲಿ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. 196 ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಎಂದು ವರ್ಗೀಕರಿಸಲಾಗಿದೆ. ಉಳಿದ 27 ತಾಲೂಕುಗಳು ಮಧ್ಯಮ ಪೀಡಿತ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕರ್ನಾಟಕಕ್ಕೆ ಬರ ಪರಿಹಾರ ವಿಚಾರ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ - Drought Relief Fund