ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2024ರಲ್ಲಿನ ಅಕ್ರಮಗಳ ಸಮಗ್ರ ತನಿಖೆಗಾಗಿ ಶಿಕ್ಷಣ ಸಚಿವಾಲಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿದೆ. ವೈದ್ಯಕೀಯ ಪ್ರವೇಶಾತಿ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಕೂಗು ಜೋರಾಗಿ ಕೇಳಿಬರುತ್ತಿದ್ದಂತೆ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.
ಪರೀಕ್ಷಾ ಸುಧಾರಣೆಗೆ ಇಸ್ರೋ ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ಸಮಿತಿ: ಇದರ ಜೊತೆಗೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಪರೀಕ್ಷಾ ಸುಧಾರಣೆಗಳಿಗಾಗಿ ಮಾಜಿ ಇಸ್ರೋ ಮುಖ್ಯಸ್ಥ ಕೆ.ರಾಧಾಕೃಷ್ಣನ್ ನೇತೃತ್ವದ ಏಳು ಸದಸ್ಯರ ಸಮಿತಿ ರಚಿಸಲಾಗಿದೆ.
ಮೇ 5ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ NEET -UG ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಪಾರದರ್ಶಕ ತನಿಖೆಗಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ.