ಅಮರಾವತಿ, ಆಂಧ್ರಪ್ರದೇಶ: ಬುಧವಾರ ನಡೆಯುವ ಎನ್‌ಡಿಎ ಉನ್ನತ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮಂಗಳವಾರವೇ ದೆಹಲಿ ತಲುಪಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಆಂಧ್ರಪ್ರದೇಶದಲ್ಲಿ ಟಿಡಿಪಿ ನೇತೃತ್ವದ ಎನ್‌ಡಿಎ ಸರ್ಕಾರದ ನೇತೃತ್ವ ವಹಿಸಿರುವ ನಾಯ್ಡು ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಬುಧವಾರ ಬೆಳಗ್ಗೆ ಅಟಲ್ ಸಮಾಧಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿಇಂದು ಎನ್‌ಡಿಎ ಸಭೆ ಆಯೋಜಿಸಲಾಗಿದೆ. ರಾಜ್ಯ-ನಿರ್ದಿಷ್ಟ ವಿಷಯಗಳ ಕುರಿತು ಚರ್ಚಿಸಲು ಟಿಡಿಪಿ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸುವ ಸಾಧ್ಯತೆಯಿದೆ.
ಮಹತ್ವ ಪಡೆದುಕೊಂಡ ಎನ್‌ಡಿಎ ಸಭೆ:ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಎ ಸಭೆ ಮಹತ್ವ ಪಡೆದುಕೊಂಡಿದೆ. ಅದರಲ್ಲೂ ವಿಶೇಷವಾಗಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ಅವರ ಟೀಕೆಗಳ ಗದ್ದಲ ಮತ್ತು ಅವರ ರಾಜೀನಾಮೆಗೆ ವಿರೋಧ ಪಕ್ಷಗಳ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಈ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ
ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾರ್ಯತಂತ್ರ:ಎನ್‌ಡಿಎ ನಾಯಕರು ಈ ಸಭೆಯಲ್ಲಿ ಪ್ರತಿಪಕ್ಷಗಳ ದಾಳಿಯನ್ನು ಎದುರಿಸುವ ಕಾರ್ಯತಂತ್ರವನ್ನು ಚರ್ಚಿಸುವ ಸಾಧ್ಯತೆಯಿದೆ. ಆಡಳಿತಾರೂಢ ಎನ್‌ಡಿಎ ಪಾಲುದಾರರಾಗಿರುವ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಉಪಸ್ಥಿತಿಯನ್ನು ಬಳಸಿಕೊಂಡು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಪ್ರಬಲ ಪ್ರತಿತಂತ್ರ ರೂಪಿಸುವ ಸಾಧ್ಯತೆಗಳಿವೆ.