ನವದೆಹಲಿ:ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿದೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ತನ್ನ ಎನ್ಡಿಎ ಮೈತ್ರಿಕೂಟವನ್ನು ಆಶ್ರಯಿಸುವುದು ಅನಿರ್ವಾಯವಾಗಿದೆ. ನಿರೀಕ್ಷೆಯಂತೆ ಬಿಜೆಪಿ ತನ್ನ ಮಿತ್ರಪಕ್ಷಗಳ ಶಕ್ತಿ ಪ್ರದರ್ಶನ ನಡೆಸಿ, ಸರ್ಕಾರ ರಚನೆ ಕರಸತ್ತು ಆರಂಭಿಸಿದೆ. ಮತ್ತೊಂದೆಡೆ, ಎರಡನೇ ಅತಿದೊಡ್ಡ ಪಕ್ಷದ ಸ್ಥಾನ ಪಡೆದಿರುವ ಕಾಂಗ್ರೆಸ್ ಸಹ ತನ್ನದೇ ರೀತಿಯಲ್ಲಿ ಗುದ್ದುಗೆ ಕರಸತ್ತು ಶುರು ಮಾಡಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿಂದು 'ಇಂಡಿ' ಮೈತ್ರಿಕೂಟದ ನಾಯಕರು ಮಹತ್ವದ ಸಭೆ ಸೇರಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಪ್ರಮುಖ ಮಿತ್ರಪಕ್ಷಗಳಾದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಎನ್ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ನಾಯಕ ಸಂಜಯ್ ರಾವುತ್, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ರಾಘವ್ ಚಡ್ಡಾ, ಸಿಪಿಎಂ ನಾಯಕರಾದ ಸೀತಾರಂ ಯೆಚೂರಿ, ಸೇರಿದಂತೆ ಭಾಗವಹಿಸಿದ್ದರು.