ಲಕ್ನೋ:ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮಸೀದಿ ಕಟ್ಟಡದ ಸರ್ವೇ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತ ಸೇರಿದಂತೆ ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ನವೆಂಬರ್ 30ರವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳ ಅನುಮತಿಯಿಲ್ಲದೇ ಯಾರೂ ಕೂಡಾ ಒಜಿಲ್ಲೆಯ ಗಡಿ ದಾಟಿ ಪ್ರವೇಶ ಮಾಡುವಂತಿಲ್ಲ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಆದೇಶ ಉಲ್ಲಂಘನೆ ಬಿಎನ್ಎಸ್ ಸೆಕ್ಷನ್ 223ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಸಲಾಗಿದೆ.
ನಗರಕ್ಕೆ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಕೂಡ ಭೇಟಿ ನೀಡುವಂತಿಲ್ಲ. ಸಾರ್ವಜನಿಕರು ಗುಂಪುಗೂಡುವಿಕೆಯನ್ನೂ ನಿರ್ಬಂಧಿಸಲಾಗಿದೆ. ಸಂಭಾಲ್ ಪ್ರದೇಶದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಶಾಲಾ, ಕಾಲೇಜ್ಗಳನ್ನು ಬಂದ್ ಮಾಡಲಾಗಿದೆ.
ಭಾನುವಾರ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಪೊಲೀಸರು 21 ಮಂದಿಯನ್ನು ಬಂಧಿಸಿದ್ದಾರೆ. ಹಲವರ ಮನೆಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಇಬ್ಬರು ಮಹಿಳೆಯರಿದ್ದು, ಸಿಸಿಟಿವಿ ಕ್ಯಾಮೆರಾ ಮೂಲಕ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.