ಸುಲ್ತಾನ್‌ಪುರ (ಉತ್ತರಪ್ರದೇಶ): ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಲು ಶುಕ್ರವಾರ ಉತ್ತರಪ್ರದೇಶದ ಸುಲ್ತಾನ್ಪುರದ ಸಂಸದ - ಶಾಸಕರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಗ್ಗೆ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2018ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಕುರಿತು ಸುಲ್ತಾನ್ಪುರದ ಕೊತ್ವಾಲಿ ದೇಹತ್ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಗಂಜ್ ನಿವಾಸಿ, ಸಹಕಾರಿ ಬ್ಯಾಂಕ್ವೊಂದರ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ವಿಜಯ್ ಮಿಶ್ರಾ 2018ರ ಆಗಸ್ಟ್ 4ರಂದು ನ್ಯಾಯಾಲಯದ ಮೂಲಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 20ರಂದು ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ, ರಾಹುಲ್ ಪರ ವಕೀಲರು ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯ ಕಾಂಗ್ರೆಸ್ ನಾಯಕರಿಗೆ 25,000 ರೂ.ಗಳ ಶ್ಯೂರಿಟಿ ಬಾಂಡ್ ಮೇಲೆ ಜಾಮೀನು ನೀಡಿ, ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಹಾಜರಾಗುವಂತೆ ದಿನಾಂಕ ನೀಡಿತ್ತು.