ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಮನ್ಸ್‌ಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರಾಗಬೇಕಿದ್ದ ಅರವಿಂದ್ ಕೇಜ್ರಿವಾಲ್ ಅವರು ಖುದ್ದು ಹಾಜರಾತಿಯಿಂದ ಶನಿವಾರ ವಿನಾಯಿತಿ ಪಡೆದರು. ಜಾರಿ ನಿರ್ದೇಶನಾಲಯ(ಇಡಿ) ನೀಡಿದ ದೂರಿಗೆ ಸಂಬಂಧಿಸಿದಂತೆ ಅವರು ಇಂದು ದಿಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕಿತ್ತು.
ರದ್ದಾದ ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿ ಜಾರಿ ಮಾಡಲಾಗಿರುವ 5 ಸಮನ್ಸ್‌ಗಳನ್ನು ಸಿಎಂ ಕೇಜ್ರಿವಾಲ್ ಅವರು ನಿರ್ಲಕ್ಷಿಸಿದ್ದಾರೆ ಎಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಇಡಿ ದೂರು ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 17 ರಂದು ಹಾಜರಾಗಲು ಸಿಎಂಗೆ ಕೋರ್ಟ್ ಸೂಚಿಸಿತ್ತು.
ಇಂದಿನ ವಿಚಾರಣೆಗೆ ಆಪ್ ನಾಯಕ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿ, ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ಖುದ್ದು ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಇದನ್ನು ಅಂಗೀಕರಿಸಿದರು.
ದೂರಿನ ವಿಚಾರಣೆಯ ಆರಂಭದಲ್ಲಿ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಮೇಶ್ ಗುಪ್ತಾ ಅವರು, ಸಿಎಂ ಕೇಜ್ರಿವಾಲ್ ಅವರು ಕೋರ್ಟ್ ಮುಂದೆ ಖುದ್ದು ಹಾಜರಾಗಲು ಸಾಧ್ಯವಾಗುತ್ತಿಲ್ಲ. ಮುಂದಿನ ವಿಚಾರಣೆಯ ದಿನಾಂಕದಂದು ಅವರೇ ಬರಲಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಬಳಿಕ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮಾರ್ಚ್ 16ಕ್ಕೆ ಮುಂದೂಡಿತು.