ನವದೆಹಲಿ :ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಮಾರ್ಚ್ 13 ರವರೆಗೆ ವಿಚಾರಣೆ ನಡೆಸದಂತೆ ಇಡಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರಿದ್ದ ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 13 ರಂದು ನಡೆಸುವುದಾಗಿ ಹೇಳಿದೆ. ಕವಿತಾ ಅವರು ಸಮನ್ಸ್ಗೆ ಸ್ಪಂದಿಸುತ್ತಿಲ್ಲ ಹಾಗೂ ಇಡಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಫೆಬ್ರವರಿ 5 ರಂದು ಸುಪ್ರೀಂಕೋರ್ಟ್ಗೆ ಹೇಳಿತ್ತು. ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಸುಪ್ರೀಂ ಪೀಠದ ಮುಂದೆ ತಮ್ಮ ವಾದ ಮಂಡಿಸಿದ್ದರು.
ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸುವವರೆಗೆ ಕವಿತಾಳನ್ನು ವಿಚಾರಣೆಗೆ ಆಹ್ವಾನಿಸುವುದಿಲ್ಲ ಎಂದು ಎಎಸ್‌ಜಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು ಎಂದರು.