ನವದೆಹಲಿ:18ನೇ ಲೋಕಸಭೆ ಚುನಾವಣೆಯ ಏಪ್ರಿಲ್ 19ರಂದು ನಡೆಯುವ ಮೊದಲ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಹೊರಡಿಸಿದೆ. ಮೊದಲ ಹಂತದ ಮತದಾನ ನಡೆಯುವ ರಾಜ್ಯಗಳಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.
ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಇದರಲ್ಲಿ ಬಿಹಾರ ರಾಜ್ಯದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯಾಗಿದ್ದರೆ, ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರ್ಚ್ 27 ಅಂತಿಮ ದಿನ. ಮಾರ್ಚ್ 30ರಂದು ಬಿಹಾರದಲ್ಲಿ ನಾಮಪತ್ರ ಪರಿಶೀಲನೆ ಕಾರ್ಯ ನಡೆದರೆ, ಉಳಿದ ರಾಜ್ಯಗಳಲ್ಲಿ ಮಾರ್ಚ್ 28ರಂದು ನಡೆಯಲಿದೆ. ನಾಮಪತ್ರ ವಾಪಸ್ಗೆ ಬಿಹಾರಕ್ಕೆ ಏಪ್ರಿಲ್ 2, ಉಳಿದ ರಾಜ್ಯಗಳಿಗೆ ಮಾರ್ಚ್ 30 ಕೊನೆ ದಿನವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.