ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಶಾಸಕ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ 11.24ಕ್ಕೆ ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಬೋಕರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಅಶೋಕ್ ಚೌಹಾಣ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಗೂ ಪತ್ರ ಬರೆದಿದ್ದಾರೆ. "ನಾನು ನನ್ನ ವಿಧಾನಸಭೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಸಲ್ಲಿಸಿದ್ದೇನೆ" ಎಂದು ಅವರು ಖಚಿತಪಡಿಸಿದ್ದಾರೆ.
ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕ್ ಮತ್ತು ಮಿಲಿಂದ್ ದಿಯೋರಾ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಅವರ ಬೆನ್ನಲ್ಲೇ ಅಶೋಕ್ ಚೌಹಾಣ್ ಕೂಡ ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದಾರೆ. ಇವರ ರಾಜೀನಾಮೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಚೌಹಾಣ್ ಅವರ ರಾಜೀನಾಮೆಯಿಂದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗಳ ಮೇಲೆ ಭಾರಿ ಪರಿಣಾಮ ಬೀರಲಿದೆ ಎಂಬ ಚರ್ಚೆಗಳು ಶುರುವಾಗಿವೆ.
ಮೂಲಗಳ ಪ್ರಕಾರ ಅವರು ಬಿಜೆಪಿ ಸೇರುವ ಸಾಧ್ಯತೆ ಇದ್ದು, ರಾಜ್ಯಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ಸಂಭವವಿದೆ ಎಂಬ ರಾಜಕೀಯ ಲೆಕ್ಕಾಚಾರ ಕೂಡ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ತಿಂಗಳ ಅಂತ್ಯಕ್ಕೆ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅವರು ಬಿಜೆಪಿ ಸೇರಲಿದ್ದಾರೆ ಎಂದು ಮಾತುಗಳು ಕೇಳಿ ಬರುತ್ತಿವೆ. ಆದರೆ, ಸದ್ಯಕ್ಕೆ ಈ ವಿಚಾರವನ್ನು ತಳ್ಳಿಹಾಕಿರುವ ಅವರು, ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿಲ್ಲ. ಇನ್ನೆರಡು ದಿನದಲ್ಲಿ ರಾಜಕೀಯ ದಿಕ್ಸೂಚಿ ನಿರ್ಧಾರವಾಗಲಿದೆ ಎಂದಿದ್ದಾರೆ.