ಮುಂಬೈ, ಮಹಾರಾಷ್ಟ್ರ:ಬುಧವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಉನ್ನತ ಹುದ್ದೆಗೆ ಅಂತಿಮಗೊಳಿಸಲಾಯಿತು.
ಬಿಜೆಪಿ ಕೋರ್ ಕಮಿಟಿ ಸಭೆ:ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಕೇಂದ್ರ ವೀಕ್ಷಕರಾಗಿ ಬಿಜೆಪಿ ನೇಮಿಸಿದೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡನೆ:ಮಹಾಯುತಿಯ ಪಾಲುದಾರ ಪಕ್ಷಗಳ ಮುಖಂಡರು ಬುಧವಾರ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎಂದು ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ, ಬಿಜೆಪಿ ನಾಯಕ ಸುಧೀರ್ ಮುನಗಂಟಿವಾರ್ ಹೇಳಿದರು.