ದಿಂಡಿಗಲ್(ತಮಿಳುನಾಡು):ಇಲ್ಲಿನ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ ಒಂದು ಮಗು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸಿದರು.
ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದವು. ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಹತ್ತಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸಿದವು ಎಂದು ವರದಿಯಾಗಿದೆ.
ಅವಘಡದಲ್ಲಿ ಒಂದು ಮಗು, ಮೂವರು ಪುರುಷರು, ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಪೂಂಗೊಡಿ ಹಾಗೂ ಪಳನಿ ಶಾಸಕ ಐ.ಬಿ.ಸೆಂಥಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.