ನವದೆಹಲಿ: ಜುಲೈ 2 ರಂದು ನಡೆದ ಹತ್ರಾಸ್ ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತಕ್ಷಣವೇ ಐದು ಸದಸ್ಯರ ತಜ್ಞರ ಸಮಿತಿಯನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರಾಯ್ ಗ್ರಾಮದಲ್ಲಿ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ.
ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವ ಮುನ್ನವೇ, ಸಂವಿಧಾನದ 32 ನೇ ವಿಧಿಯಡಿ ನೇರವಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಏಕೆ ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಅರ್ಜಿದಾರರನ್ನು ವೈಯಕ್ತಿಕವಾಗಿ ಪ್ರಶ್ನಿಸಿತು.
"ನೀವು ಅಲಹಾಬಾದ್ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಬಹುದು. ಉಚ್ಚ ನ್ಯಾಯಾಲಯಗಳು ಸಮರ್ಥ ನ್ಯಾಯಾಲಯಗಳಾಗಿವೆ. ಇಂಥ ವಿಷಯಗಳಲ್ಲಿ ವ್ಯವಹರಿಸುವುದಕ್ಕಾಗಿಯೇ ಅವುಗಳನ್ನು ಸ್ಥಾಪಿಸಲಾಗಿದೆ. ಹೀಗಾಗಿ ಮೊದಲು ನೀವು ಹೈಕೋರ್ಟ್ ಕದ ತಟ್ಟಿ" ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿತು.
ಅಲ್ಲದೆ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಬೇಕೆಂಬ ಪಿಐಎಲ್ ಕಕ್ಷಿದಾರರ ಮನವಿಯನ್ನು ಸ್ವೀಕರಿಸಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿತು. ಆದಾಗ್ಯೂ ಸಂವಿಧಾನದ 226 ನೇ ವಿಧಿಯ ಪ್ರಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಸ್ವಾತಂತ್ರ್ಯ ನೀಡಿತು.
ಕಾಲ್ತುಳಿತ ನಡೆದ ಸಭೆಯ ಆಯೋಜಕರು, ಅಧಿಕಾರಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ವರ್ತನೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಯುಪಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾದ ಪಿಐಎಲ್ನಲ್ಲಿ ಕೋರಲಾಗಿದೆ.
"ಉತ್ತರಪ್ರದೇಶದಲ್ಲಿ ಮಂಗಳವಾರ ನಡೆದ ಧಾರ್ಮಿಕ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತದ ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ... ಆದ್ದರಿಂದ ಗೌರವಾನ್ವಿತ ನ್ಯಾಯಾಲಯವು ಸಾರ್ವಜನಿಕ ಪ್ರಾಮುಖ್ಯತೆಯ ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದು ಮತ್ತು ಭಾರತದ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಅತ್ಯಂತ ಮಹತ್ವದ್ದಾಗಿದೆ" ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಏತನ್ಮಧ್ಯೆ, ಹತ್ರಾಸ್ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಎಸ್ಐಟಿ ನೀಡಿದ ವರದಿಯ ಶಿಫಾರಸುಗಳ ಮೇರೆಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ), ಸರ್ಕಲ್ ಆಫೀಸರ್ (ಸಿಒ) ಮತ್ತು ತಹಶೀಲ್ದಾರ್ ಸೇರಿದಂತೆ ಆರು ಅಧಿಕಾರಿಗಳನ್ನು ಅಮಾನತುಗೊಳಿಸಲು ಆದೇಶಿಸಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ (II) ಅವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ನ್ಯಾಯಾಂಗ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.
ಇದನ್ನೂ ಓದಿ : 2060ರವರೆಗೂ ಅತ್ಯಧಿಕ ಜನಸಂಖ್ಯಾ ದೇಶವಾಗಿ ಭಾರತ: 2080ಕ್ಕೆ ವಿಶ್ವದ ಜನಸಂಖ್ಯೆ ಉತ್ತುಂಗಕ್ಕೆ! - Population Of India