ನವದೆಹಲಿ: ನೀಟ್ ಪರೀಕ್ಷೆ ವಿವಾದದ ಬಗ್ಗೆ ರಾಜ್ಯಸಭೆಯಲ್ಲಿ ಗದ್ದಲದ ನಡುವೆಯೇ ಸದನ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶುಕ್ರವಾರ ಪ್ರತಿಪಕ್ಷಗಳಿಗೆ ಮನವಿ ಮಾಡಿದರು. ಇದೇ ವೇಳೆ, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಸರ್ಕಾರ ಹೊಣೆಗಾರಿಕೆ ಹೊರಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದರು. ಅಲ್ಲದೇ, ಎಲ್ಲ ಸದಸ್ಯರು ಸದನದ ಬಾವಿಗಿಳಿದಿದ್ದರಿಂದ ಗೊಂದಲದ ಗೂಡಾಯಿತು. ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಗೌಡರು, ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಸಿಬಿಐ ತನಿಖೆಗೆ ಆದೇಶಿಸಿ ಸರ್ಕಾರ ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿಸಿದರು.