ಅಲಪ್ಪುಳ(ಕೇರಳ):ಎರಡು ವರ್ಷಗಳ ಹಿಂದೆ ಕೇರಳದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡನ ಹತ್ಯೆ ಪ್ರಕರಣದ ಅಂತಿಮ ಆದೇಶವನ್ನು ಅಲಪ್ಪುಳ ನ್ಯಾಯಾಲಯ ಮಂಗಳವಾರ ಪ್ರಕಟಿಸಿದೆ. ಈ ಪ್ರಕರಣದಲ್ಲಿ 15 ಮಂದಿ ತಪ್ಪಿತಸ್ಥರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆಗೊಳಗಾದವರು ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದವರಾಗಿದ್ದಾರೆ.
ಕೇರಳದ ಇತಿಹಾಸದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟೊಂದು ಮಂದಿಗೆ ಮರಣದಂಡನೆ ವಿಧಿಸಿರುವುದು ಇದೇ ಮೊದಲು. 8 ಜನರ ವಿರುದ್ಧ ಕೊಲೆ ಆರೋಪ ಹಾಗೂ ಉಳಿದವರ ವಿರುದ್ಧ ಸಂಚು ರೂಪಿಸಿದ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ. ಇವರೆಲ್ಲರೂ ತರಬೇತಿ ಪಡೆದ ಕೊಲೆಗಾರರಾಗಿದ್ದಾರೆ. ಬಿಜೆಪಿ ನಾಯಕನನ್ನು ಅವರ ಕುಟುಂಬದ ಮುಂದೆಯೇ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಸರ್ಕಾರಿ ವಕೀಲರು ಪ್ರತಿಪಾದಿಸಿದರು. ಇದನ್ನು ಅತ್ಯಂತ ಘೋರ ಅಪರಾಧ ಎಂದು ಪರಿಗಣಿಸಿ, ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ನೀಡುವಂತೆ ನ್ಯಾಯಾಲಯವನ್ನು ಕೋರಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಅಪರಾಧಿಗಳಿಗೆ ಮರಣದಂಡನೆ ವಿಧಿಸಿದೆ.
ಪ್ರಕರಣದ ಹಿನ್ನೆಲೆ; ಡಿಸೆಂಬರ್ 19, 2021 ರಂದು, ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಅಲಪ್ಪುಳಾದಲ್ಲಿ ಹತ್ಯೆ ಮಾಡಲಾಗಿತ್ತು. PFI ಮತ್ತು SDPI ಕಾರ್ಯಕರ್ತರು ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದ್ದರು. ಘಟನೆ ಕುರಿತು ಪೊಲೀಸರು ತನಿಖೆ ನಡೆಸಿ ಕೆಲವರನ್ನು ಬಂಧಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 15 ಮಂದಿ ತಪ್ಪಿತಸ್ಥರೆಂದು ತೀರ್ಪು ನೀಡಿದೆ.
ಈ ಹಿಂದೆ ಪಾಪ್ಯುಲರ್ ಫ್ರಂಟ್ ಮತ್ತು ಎಸ್‌ಡಿಪಿಐನ 15 ಕಾರ್ಯಕರ್ತರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಆದೇಶ ನೀಡಿತ್ತು. ಶಿಕ್ಷೆಯ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಚೆಂಗನ್ನೂರು ಮತ್ತು ಕಾಯಂಕುಲಂ ಡಿವೈಎಸ್ಪಿಗಳ ನೇತೃತ್ವದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಭದ್ರತೆ ಒದಗಿಸಿದ್ದರು. ಆಲಪ್ಪುಳ ಡಿವೈಎಸ್ಪಿ ಎನ್.ಆರ್. ಜಯರಾಜ್ ಪ್ರಕರಣದ ತನಿಖೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ 156 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿತು.