ಕೋಲ್ಕತ್ತಾ(ಪಶ್ಚಿಮ ಬಂಗಾಳ):ಕೋಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಹಲವು ಸವಾಲುಗಳು ಎದುರಾಗಿವೆ. ಪ್ರಕರಣದಲ್ಲಿ ಆರೋಪಿಗಳಾಗಿರುವ ಆರ್.ಜಿ.ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದೆ. ಎಲ್ಲರೂ ವಿಭಿನ್ನ ಮತ್ತು ಅಸಮಂಜಸ ಉತ್ತರ ನೀಡುತ್ತಿದ್ದು, ಸತ್ಯ ಬಯಲಿಗೆಳೆಯಲು ಸಿಬಿಐ ಪಾಲಿಗ್ರಾಫ್ ಪರೀಕ್ಷೆಗೆ ಮುಂದಾಗಿದೆ.
ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ವರ್ತನೆಯು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದ್ದು, ಆತನ ಜೊತೆಗೆ ಉಳಿ ನಾಲ್ವರು ವೈದ್ಯರಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಸಿಬಿಐ ನಿರ್ಧರಿಸಿದೆ. ಇದಕ್ಕಾಗಿ ಕೋಲ್ಕತ್ತಾ ವಿಶೇಷ ನ್ಯಾಯಾಲಯದಿಂದ ಅನುಮತಿಯನ್ನೂ ಪಡೆದುಕೊಂಡಿದೆ.
ಸಂದೀಪ್ ಘೋಷ್ ಅವರು ವೈದ್ಯೆ ವಿದ್ಯಾರ್ಥಿನಿ ಹತ್ಯೆಯಾದ ದಿನ ಆಸ್ಪತ್ರೆಯಲ್ಲಿದ್ದರು ಎಂಬುದು ತಿಳಿದುಬಂದಿದೆ. ಹೀಗಾಗಿ ಅವರ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಸಂದೀಪ್ ಅಧಿಕಾರಿಗಳಿಗೆ ಸಹಕರಿಸುತ್ತಿಲ್ಲ. ಉತ್ತರಗಳು ನೀಡುತ್ತಿಲ್ಲ ಎಂದು ಸಿಬಿಐ ಹೇಳಿದೆ. ಹೀಗಾಗಿ ಅವರಿಗೆ ಸುಳ್ಳು ಪತ್ತೆ ಪರೀಕ್ಷೆ ಮಾಡಲು ಮುಂದಾಗಿದೆ. ಕೋರ್ಟ್ ಸಮ್ಮತಿ ನೀಡಿದ ಕಾರಣ ಅವರಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಯಲಿದೆ.
ಪಿಎಂ ಮೋದಿಗೆ ಸಿಎಂ ಮಮತಾ ಪತ್ರ:ಮತ್ತೊಂದೆಡೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಯಲು ಕಠಿಣ ಕಾನೂನು ತರುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.