ನವದೆಹಲಿ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಟಿಕೆಟ್ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಸಾಕಷ್ಟು ಕುತೂಹಲವಿದೆ. ಇದರ ನಡುವೆ ಇಂದು ದೆಹಲಿಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ, ''ಮುಂದಿನ ಅವಧಿಯಲ್ಲಿಯೂ ಸಹ ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ'' ಎಂದು ಸುಮಲತಾ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ವಿರುದ್ಧ ಗೆಲುವು ಸಾಧಿಸಿದ್ದರು. ಕೆಲವು ತಿಂಗಳ ಹಿಂದಷ್ಟೇ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಟ್ಟಿಗೆ ಸ್ಪರ್ಧಿಸಲಿವೆ. ಹೀಗಾಗಿ ಮಂಡ್ಯದ ಟಿಕೆಟ್ ಬಗ್ಗೆ ಸಹಜವಾಗಿಯೇ ಕುತೂಹಲವಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ನಿರಂತರವಾಗಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಪ್ರಧಾನಿ ಮೋದಿ ಅವರನ್ನೂ ಭೇಟಿ ಮಾಡಿದ್ದಾರೆ. ಈ ಕುರಿತು ಖುದ್ದು ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯಲ್ಲಿ ಮೋದಿ ಅವರೊಂದಿಗಿನ ಪೋಟೋ, ಮಾಹಿತಿ ಹಂಚಿಕೊಂಡಿದ್ದಾರೆ.
ಸುಮಲತಾ ಪೋಸ್ಟ್ ಹೀಗಿದೆ: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ನನ್ನ ಧನ್ಯವಾದಗಳು. ನರೇಂದ್ರ ಮೋದಿಯವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ.
ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.