ಇಂಫಾಲ(ಮಣಿಪುರ):ಮಣಿಪುರದ ಉಖ್ರುಲ್ ಪಟ್ಟಣದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯ ಸಂದರ್ಭದಲ್ಲಿ ಗುಂಪೊಂದು ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
‘ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರದ ವೇಳೆ ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಲಾಗಿದೆ.
ಲೂಟಿ ಮಾಡಿ ಪರಾರಿ:ನಾಗಾ ಸಮುದಾಯದ ಎರಡು ಗುಂಪುಗಳ ನಡುವಿನ ಘರ್ಷಣೆಯ ನಂತರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಉಖ್ರುಲ್ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, ಯುವಕರಿದ್ದ ಗುಂಪು ವಿನೋ ಬಜಾರ್‌ನಲ್ಲಿರುವ ಪೊಲೀಸ್ ಠಾಣೆಗೆ ನುಗ್ಗಿತು. ಅಲ್ಲಿದ್ದ ಶಸ್ತ್ರಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಲೂಟಿಯಾದ ಶಸ್ತ್ರಾಸ್ತ್ರಗಳು ಯಾವುವು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆದಾಗ್ಯೂ, ಲೂಟಿಯಾದ ಶಸ್ತ್ರಾಸ್ತ್ರಗಳಲ್ಲಿ AK-47 ಮತ್ತು INSAS ರೈಫಲ್‌ಗಳು ಸೇರಿವೆ ಎಂದು ಮೂಲಗಳು ಹೇಳಿವೆ.