ನವದೆಹಲಿ:ದೆಹಲಿ ವಿಶ್ವವಿದ್ಯಾಲಯದ ಕಾನೂನು ವಿಭಾಗದ ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕವನ್ನು 10 ದಿನಗಳವೆರೆಗೆ ಮುಂದೂಡುವಂತೆ ಒತ್ತಾಯಿಸಿ ಸೋಮವಾರ ರಾತ್ರಿ ಪ್ರತಿಭಟನೆ ನಡೆಸಿದರು. ಈ ವೇಳೆ, ವಿದ್ಯಾರ್ಥಿಗಳು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಯಾವುದೇ ಎಚ್ಚರಿಕೆ ನೀಡದೇ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮಾಹಿತಿಯ ಪ್ರಕಾರ, ಸೋಮವಾರ ಬೆಳಗ್ಗೆಯಿಂದಲೇ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಪ್ರಾರಂಭಿಸಿದ್ದರು. ಜೊತೆಗೆ ಕಾನೂನು ವಿಭಾಗದ ಗೇಟ್ ಮುಚ್ಚಿ, ಡೀನ್ ವಿಶ್ವವಿದ್ಯಾಲಯದಿಂದ ಹೊರ ಹೋಗದಂತೆ ತಡೆದಿದ್ದರು. ಆಗ ಡೀನ್ ದೆಹಲಿ ಪೊಲೀಸರ ಸಹಾಯ ಕೋರಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸುತ್ತಲೇ ಇದ್ದರು.
ಆದರೆ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪೊಲೀಸ್ ಪಡೆಯೊಂದಿಗೆ ಗಲಾಟೆ ಪ್ರಾರಂಭಿಸಿದ್ದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಚಾರ್ಜ್ಗೂ ಮುನ್ನ ಪೊಲೀಸರು ಯಾವುದೇ ಎಚ್ಚರಿಕೆ ನೀಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಮುಂದುವರಿಸಿದ್ದಾರೆ.