ಥಾಣೆ (ಮಹಾರಾಷ್ಟ್ರ) : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿ ಗುರುವಾರ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ, ಅಧ್ಯಕ್ಷೆ ದ್ರೌಪದಿ ಮುರ್ಮು ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಡೊಂಬಿವಿಲಿ ಎಂಐಡಿಸಿ ಪ್ರದೇಶದ 2ನೇ ಹಂತದಲ್ಲಿರುವ ಅಂಬರ್ ಕೆಮಿಕಲ್ ಕಂಪನಿಯಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ಧವು ಒಂದು ಕಿಲೋಮೀಟರ್ ದೂರಕ್ಕೆ ಕೇಳುವಷ್ಟು ಜೋರಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪರಿಣಾಮ ಅಕ್ಕಪಕ್ಕದ ಕಟ್ಟಡದ ಗಾಜಿನ ಕಿಟಕಿಗಳು ಒಡೆದಿದ್ದು, ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದೆ. ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಥಾಣೆ ನಾಗರಿಕ ಸಂಸ್ಥೆಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಯಾಸಿನ್ ತದ್ವಿ ಹೇಳಿದ್ದಾರೆ. ಸ್ಫೋಟದಿಂದ ಉಂಟಾದ ಬೆಂಕಿ ಅಕ್ಕಪಕ್ಕದ ಮೂರು ಕಾರ್ಖಾನೆಗಳಿಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಯಿಂದಾದ ದಟ್ಟವಾದ ಹೊಗೆ ಬಹಳ ದೂರದವರೆಗೆ ವ್ಯಾಪಿಸಿದೆ ಎಂದು ಅವರು ಹೇಳಿದರು.