ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ದೆಹಲಿಯಲ್ಲಿ ಗುರುವಾರ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಖುದ್ದು ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
''ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ಬಿ.ಎಲ್.ಸಂತೋಷ್ ಅವರನ್ನು ಅನೌಪಚಾರಿಕವಾಗಿ ಭೇಟಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಲಾಯಿತು. ತಮ್ಮ ಅಮೂಲ್ಯ ಸಮಯವನ್ನು ನೀಡಿ, ನನ್ನ ಮಾತುಗಳನ್ನು ಆಲಿಸಿದ ನಡ್ಡಾಜಿ ಮತ್ತು ಸಂತೋಷ್‌ಜಿ ಅವರಿಗೂ ಧನ್ಯವಾದಗಳು. ತಮ್ಮ ಸಹಕಾರದ ಮಾತುಗಳಿಗೆ ಮತ್ತೊಮ್ಮೆ ಧನ್ಯವಾದಗಳು'' ಎಂದು ಸಂಸದೆ ತಮ್ಮ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಬಿಜೆಪಿ ಟಿಕೆಟ್ ಬಗ್ಗೆ ಚರ್ಚೆ?:2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಕೆಲ ತಿಂಗಳ ಹಿಂದೆ ಇವರು ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್‌ಗಾಗಿ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ, ಟಿಕೆಟ್ ನೀಡದಿದ್ದರೆ ತಮ್ಮ ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗುವುದು ಎಂಬುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.