ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಸೋಮವಾರ ದೆಹಲಿಗೆ ತಿರುಗಿಸಲಾಯಿತು. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಪ್ರಸ್ತುತ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಗುಣಮಟ್ಟದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿ ಪೊಲೀಸರು ತಿಳಿಸಿದ್ದಿಷ್ಟು:ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಬಾಂಬ್ ಬೆದರಿಕೆಯ ಕುರಿತ ಭದ್ರತಾ ಕಳವಳಗಳ ಹಿನ್ನೆಲೆಯಲ್ಲಿ ದೆಹಲಿ ಕಡೆ ತಿರುಗಿಸಲಾಗಿದೆ. ವಿಮಾನವನ್ನು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ತೆರಳಲು ಸೂಚಿಸಲಾಯಿತು. ವಿಮಾನ ನಿಲ್ದಾಣದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಮತ್ತು ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆಯೂ ಹಲವು ಹುಸಿ ಬಾಂಬ್ ಕರೆ:ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ ದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು, ಆದರೆ ಬಂದರು ನಗರದಲ್ಲಿ ಲ್ಯಾಂಡಿಂಗ್ ಬಳಿಕ ಕೂಲಂಕಷವಾಗಿ ಪರಿಶೀಲಿಸಿದ ನಂತರ ಅದೊಂದು ಸುಳ್ಳು ಕರೆ ಎಂದು ಖಚಿತವಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ಸಂದೇಶ ನೀಡಲಾಗಿದೆ ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ರಾಜಾ ರೆಡ್ಡಿ ಹೇಳಿದ್ದಾರೆ.
ಆಗಸ್ಟ್‌ನಲ್ಲಿ ಮುಂಬೈನಿಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಇದು ಸಹ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿತ್ತು.
ಇದನ್ನು ಓದಿ:ಗೂಗಲ್ ಡೀಪ್ಮೈಂಡ್ನ ವಿಜ್ಞಾನಿಗಳಿಬ್ಬರಿಗೆ 2024ರ ರಸಾಯನ ಶಾಸ್ತ್ರ ನೊಬೆಲ್ ಪ್ರಶಸ್ತಿ