ನವದೆಹಲಿ: ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ದಿಲ್ಲಿ ಮುಖ್ಯಮಂತ್ರಿ ಅತಿಶಿ ಅವರ ರಾಜಕೀಯ ಪ್ರಚಾರದಲ್ಲಿ ಮಕ್ಕಳು ಭಾಗಿಯಾಗಿದ್ದನ್ನು ತೋರಿಸುವ ಆಕ್ಷೇಪಾರ್ಹ ವೀಡಿಯೊಗಳನ್ನು ತಕ್ಷಣವೇ ತೆಗೆದುಹಾಕುವಂತೆ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಸದಸ್ಯ ಪ್ರಿಯಾಂಕ್ ಕನೂಂಗೊ ಸೋಮವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ಗೆ ನಿರ್ದೇಶನ ನೀಡಿದ್ದಾರೆ.
ಈ ವಿಷಯದ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಗಮನ ಸೆಳೆದಿರುವ ಕನೂಂಗೊ, ರಾಜಕೀಯ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ಪಕ್ಷಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಎಕ್ಸ್ ಸಾಮಾಜಿಕ ಮಾಧ್ಯಮದ ರೆಸಿಡೆಂಟ್ ಕುಂದುಕೊರತೆ ನಿವಾರಣಾ ಅಧಿಕಾರಿ ವಿನಯ್ ಪ್ರಕಾಶ್ ಅವರಿಗೆ ಬರೆದ ಪ್ರತ್ಯೇಕ ಪತ್ರಗಳಲ್ಲಿ, ರಾಜಕೀಯ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳ ಭಾಗವಹಿಸುವಿಕೆಯ ಬಗ್ಗೆ ಆಯೋಗವು ತೀವ್ರ ಕಳವಳ ಹೊಂದಿದೆ ಎಂದು ಕನೂಂಗೊ ಹೇಳಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ, 1993 ರ ಸೆಕ್ಷನ್ 12 (ಎ) ಅಡಿಯಲ್ಲಿ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದ ಆಯೋಗವು, ಸಿಎಂ ಅತಿಶಿ ಮತ್ತು ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ರಾಜಕೀಯ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳು ನೇರವಾಗಿ ಭಾಗಿಯಾಗಿರುವುದನ್ನು ತೋರಿಸುವ ಕಂಟೆಂಟ್ ಅಥವಾ ವೀಡಿಯೊವನ್ನು ಶೇರ್ ಮಾಡಿರುವ ಪೋಸ್ಟ್ ತನ್ನ ಗಮನಕ್ಕೆ ಬಂದಿದೆ ಎಂದು ಹೇಳಿದೆ.