ನವದೆಹಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಪರಿಕಲ್ಪನೆಯ 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಕಾಂಗ್ರೆಸ್ ಬಲವಾದ ವಿರೋಧ ವ್ಯಕ್ತಪಡಿಸಿದೆ. 'ಒಂದು ರಾಷ್ಟ್ರ, ಒಂದು ಚುನಾವಣೆ'ಯು ಇದು ಫೆಡರಲಿಸಂ ಮತ್ತು ಸಂವಿಧಾನದ ಮೂಲ ರಚನೆಯ ಭರವಸೆಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ವಿಚಾರವನ್ನು ಇಲ್ಲಿಗೆ ಕೈಬಿಟ್ಟು, ಈ ಕುರಿತು ರಚಿಸಲಾಗಿರುವ ಉನ್ನತಾಧಿಕಾರ ಸಮಿತಿ ವಿಸರ್ಜಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಪರಿಶೀಲಿಸುವ ಕುರಿತು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ವಿಷಯದ ಬಗ್ಗೆ ಅಭಿಪ್ರಾಯಗಳನ್ನು ಕೇಳಿ ರಾಜಕೀಯ ಪಕ್ಷಗಳಿಗೆ ಸಮಿತಿ ಪತ್ರ ಬರೆದಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸಮಿತಿಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವವನ್ನು ಉಲ್ಲಂಘಿಸಲು ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರಾಗಿರುವ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ವ್ಯಕ್ತಿತ್ವ ಮತ್ತು ಮಾಜಿ ರಾಷ್ಟ್ರಪತಿಗಳ ಕಚೇರಿಯನ್ನು ಕೇಂದ್ರ ಸರ್ಕಾರವು ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಖರ್ಗೆ ಮನವಿ ಮಾಡಿದ್ದಾರೆ.